ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ ಪಿಂಕ್ ಕಾರ್ಡ್ !!!
ಶೀಘ್ರದಲ್ಲೇ ಆರಂಭವಾಗಲಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲು ಉದ್ದೇಶಿಸಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಾಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕಂದಾಯ ಸಚಿವರಾದ ಶ್ರೀ ಕೃಷ್ಣಾ ಬೈರೇಗೌಡ ಮೊದಲಾದವರು ಉಪಸ್ಥಿತರಿದ್ದರು.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ಇದುವರೆಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಪಿಂಕ್ ಕಾರ್ಡ್ ದೊರೆಯಲಿದೆ ಎಂದು ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಈ ವರೆಗೆ 1.5 ಕೋಟಿ ಆಕಾಂಕ್ಷಿಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದುವರೆದಿದೆ. ಈ ಯೋಜನೆಗೆ ಚಾಲನೆ ನೀಡುವ ಸಂಬಂಧ ಸಚಿವರು, ಜಿಲ್ಲಾಧಿಕಾರಿಗಳು , ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಅದರ ಸಲಹೆ ಮೇರೆಗೆ ಆಗಸ್ಟ್ 20ನೇ ತಾರೀಖು ಕಾರ್ಯಕ್ರಮವನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.